ಬೆಳಗಾವಿ –
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿಸೆಂಬರ್ 4 ಹಾಗೂ 5 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿ.4ರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಅದೇ ದಿನ ಸಂಜೆ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದ್ದು ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ.ಇನ್ನೂ ಮಾರನೇಯ ದಿನ ಡಿಸೆಂಬರ್ 5 ರ ಬೆಳಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.ಅಂದೇ ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಸಿಎಂ ಯಡಿಯೂರಪ್ಪ ಮರಳಲಿದ್ದಾರೆ