ಬೇಲೂರು
ಮಾನಸಿಕ ಕಿರುಕುಳ ಹಾಗೂ ಬಹಿಷ್ಕಾರದ ಬೆದರಿಕೆಗೆ ಹೆದರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಸಂತ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲ್ಲೂಕಿನ ನಾರ್ವೆಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾದನೆ ಗ್ರಾಮದಲ್ಲಿ ನಡೆದಿದೆ.

ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಸಂತ್ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಶೋಭಾ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾರ್ವೆಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಪ್ರಕಾಶ್ ಅವರು ಚುನಾವಣೆಗೆ ಸ್ಪರ್ಧಿಸುವ ಮುನ್ನ ಬಿಜೆಪಿ ಬೆಂಬಲ ಪಡೆದಿದ್ದರು. ನಂತರ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ವಸಂತ ಅವರ ಒತ್ತಡವೇ ಕಾರಣ ಎಂದು ಭಾವಿಸಿದ ಬಿಜೆಪಿ ಕಾರ್ಯಕರ್ತರು, ವಸಂತ ಅವರನ್ನು ನಿಂದಿಸಿ, ಬಹಿಷ್ಕಾರದ ಬೆದರಿಕೆ ಹಾಕಿದ್ದರು. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.