ಬೆಂಗಳೂರು –
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ಹೆಚ್ಚಳ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮೇಳನದ ಬಳಿಕ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪೊಲೀಸ್ ಮಂಡಳಿಯನ್ನು ರಚನೆ ಮಾಡಲಾಗಿದೆ. ಈ ಮಧ್ಯೆ ಹಿಂದಿನ ಸರಕಾರ ಅಧಿಕಾರಿಗಳ ವರ್ಗಾವಣೆಯನ್ನು ಎರಡು ವರ್ಷಗಳಿಂದ ಒಂದು ವರ್ಷಕ್ಕೆ ಇಳಿಕೆ ಮಾಡಿತ್ತು. ಇದೀಗ ನಮ್ಮ ಸರಕಾರ ಅದನ್ನು ಪುನಃ ಎರಡು ವರ್ಷಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಿದೆ. ಈ ಬಗ್ಗೆ ಶೀಘ್ರದಲ್ಲೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಆನ್‍ಲೈನ್ ಗೇಮ್ಸ್ ಗಳನ್ನು ನಿಷೇಧ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಈ ಸಂಬಂಧ ಈಗಾಗಲೇ ಕರಡು ಸಿದ್ಧಪಡಿಸಿದ್ದು, ಶೀಘ್ರದಲ್ಲೆ ಕಾನೂನು ರೂಪಿಸಲು ಸರಕಾರ ಉದ್ದೇಶಿಸಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು
ಆನ್‍ಲೈನ್ ಗೇಮ್ಸ್ ಗಳಿಂದ ವಂಚನೆ ಪ್ರಕರಣಗಳು ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಆನ್‍ಲೈನ್ ಗೇಮ್ಸ್ ನಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಪ್ರಗತಿಯ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಅಲ್ಲದೆ ಆನ್‍ಲೈನ್ ಗೇಮ್ಸ್ ಗಳ ಮೂಲಕ ಜೂಜಾಟವೂ ನಡೆಯುತ್ತಿದೆ. ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.
ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿರುವ ಕಾನೂನುಗಳನ್ನು ಅಧ್ಯಯನ ನಡೆಸಿದ್ದು, ಆ ರಾಜ್ಯಗಳಲ್ಲಿ ಕೆಲ ಗೇಮ್ಸ್ ಗಳಿಗೆ ಅನುಮತಿ ನೀಡಲಾಗಿದೆ. ಹೀಗಾಗಿ ಕಾನೂನು ಇಲಾಖೆಯ ಮೂಲಕ ಪರಿಶೀಲನೆ ನಡೆಸಿದ ಬಳಿಕ ಆನ್‍ಲೈನ್ ಗೇಮ್‍ಗಳ ನಿಷೇಧಕ್ಕೆ ಸೂಕ್ತ ಕ್ರಮ ವಹಿಸಲು ಉದ್ದೇಶಿಸಲಾಗಿದೆ ಎಂದರು.
‘ಕಾರಾಗೃಹದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡಿದ್ದು, ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಸರಿಪಡಿಸಲಾಗಿದೆ’