ಬೆಂಗಳೂರು –
ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಹಲಸೂರು ಗೇಟ್ ಠಾಣೆಯ ಇನ್‌ಸ್ಪೆಕ್ಟರ್ ಎನ್.ಎಚ್. ರಾಜಶೇಖರ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ವರದಿಯನ್ನೂ ಸಲ್ಲಿಸಲಾಗಿದೆ.ಅಂತರರಾಷ್ಟ್ರೀಯ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಈ ಹಿಂದೆ ಬಂಧಿಸಿದ್ದರು. ಅದೇ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇಂಥ ಸಂದರ್ಭದಲ್ಲಿ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆಯಲಾಗಿತ್ತು.ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ರಾಜಶೇಖರ್, ನಿಗದಿತ ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಿರಲಿಲ್ಲ. ನ್ಯಾಯಾಲಯ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶವನ್ನೂ ನೀಡಿತ್ತು. ಅಷ್ಟಾದರೂ ಇನ್‌ಸ್ಪೆಕ್ಟರ್ ದೋಷಾರೋಪ ಪಟ್ಟಿ ಸಲ್ಲಿಸಿರಲಿಲ್ಲ.

ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ, ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡುವಂತೆ ಆದೇಶಿಸಿತ್ತು. ಈ ಒಂದು ಹಿನ್ನಲೆಯಲ್ಲಿ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.